ಕೋಟೇಶ್ವರ: ಶಿಕ್ಷಣ ಸಂಸ್ಥೆಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಿದಾಗ ಶಿಕ್ಷಣ ಸಂಸ್ಥೆಗಳು ಬೆಳೆಯುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ. ಅಲ್ಲದೆ ಇಂತಹ ಪಂದ್ಯಕೂಟಗಳು ಯುವಕರಲ್ಲಿ ಸಂಘಟನಾ ಕೌಶಲ್ಯ ಬೆಳೆಯಲು ಸಹಕಾರಿಯಾಗಲಿವೆ ಎಂದು ಕುಂದಾಪುರ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಉಡುಪಿ ವಲಯದ ಪುರುಷರ ಕಬಡ್ಡಿ ಮತ್ತು ಮಹಿಳೆಯರ ತ್ರೋಬಾಲ್ ಪಂದ್ಯಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಕಟ್ಕೆರೆ, ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜಯಶೀಲ ಶೆಟ್ಟಿ, ಉದ್ಯಮಿಗಳಾದ ರಾಜೇಶ್ ಕಾವೇರಿ, ಕಾಲೇಜಿನ ಹಳೆ ವಿದ್ಯಾರ್ಥಿ ಸುಧೀರ್ ಕುಮಾರ್ ಶೆಟ್ಟಿ ಮಲ್ಯಾಡಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರಂಗನಾಥ ಭಟ್, ಸೂರ್ಯಕಾಂತಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಎ., ಐಕ್ಯೂಎಸಿ ಸಂಚಾಲಕಿ ಮೋಹಿನಿ ಅತ್ತಿಮನಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಡುಪಿ ವಲಯದ ಸುಮಾರು 22 ಪುರುಷರ ಕಬಡ್ಡಿ ತಂಡಗಳು ಹಾಗೂ 20 ಮಹಿಳೆಯರ ತ್ರೋಬಾಲ್ ತಂಡಗಳು ಪಂದ್ಯಕೂಟದಲ್ಲಿ ಭಾಗವಹಿಸಿದ್ದವು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಉದಯಕುಮಾರ್ ಶೆಟ್ಟಿ ವಂದಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಆಚಾರಿ ಕಾರ್ಯಕ್ರಮ ನಿರೂಪಿಸಿದರು.