ಕೋಟೇಶ್ವರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಕುಂದಾಪುರ ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಸಾಂವಿಧಾನಿಕ ಮೌಲ್ಯಗಳು ಮತ್ತು ಮತದಾರರ ಜಾಗೃತಿ ಕಾರ್ಯಕ್ರಮ ಜರುಗಿತು.

ಬಿದ್ಕಲ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಕಿಣಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸಾಂವಿಧಾನಿಕ ಮೌಲ್ಯಗಳು, ಪ್ರಜಾಪ್ರಭುತ್ವದ ಮಹತ್ವ ಹಾಗೂ ಮತದಾನದ ಹಕ್ಕಿನ ಜವಾಬ್ದಾರಿಯುತ ಬಳಕೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಯುವಶಕ್ತಿಯ ಮತದಾನದಿಂದ ಸದೃಢ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಂವಿಧಾನದ ಆಶಯಗಳನ್ನು ಗೌರವಿಸುವುದು ಮತ್ತು ಜವಾಬ್ದಾರಿಯುತ ನಾಗರಿಕರಾಗುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ವಿದ್ಯಾರ್ಥಿ ಪ್ರತಿನಿಧಿಗಳಾದ ರಂಜನ್ (ತೃತೀಯ ಬಿಎ) ಹಾಗೂ ನಿಸರ್ಗ (ದ್ವಿತೀಯ ಬಿಎ), ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಭಾಗೀರಥಿ ನಾಯ್ಕ ಸ್ವಾಗತಿಸಿದರು. ತೃತೀಯ ಬಿಎ ವಿದ್ಯಾರ್ಥಿನಿ ಸೌಮ್ಯ ಬಿ.ಎಸ್ ಕಾರ್ಯಕ್ರಮ ನಿರೂಪಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್ನ ಸಂಚಾಲಕಿ ಮತ್ತು ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೋಭಾ ಕೆ. ವಂದಿಸಿದರು.